ಆರೋಗ್ಯರಾಜ್ಯಸುದ್ದಿ

ಉದ್ಯಾನ, ಚಿತ್ರಮಂದಿರ, ಮಾಲ್‌ ಗೆ ಎರಡೂ ಡೋಸ್‌ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶ..

ಬೆಂಗಳೂರು: ನಗರದಲ್ಲಿ ಕೊರೊನಾ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ತಜ್ಞರ ಸಮಿತಿಯು ನೀಡಿರುವ ಸಲಹೆ, ಸೂಚನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಉದ್ಯಾನ, ಚಿತ್ರಮಂದಿರ, ಮಾಲ್‌ ಹಾಗೂ ಇನ್ನಿತರೆ ಸಾರ್ವಜನಿಕ ಸ್ಥಳಗಳಿಗೆ ಎರಡೂ ಡೋಸ್‌ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಅವರು ಆರೋಗ್ಯ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.

”ಕೊರೊನಾ ಕ್ಲಸ್ಟರ್‌ಗಳ ಮೇಲೂ ಗಮನಹರಿಸಬೇಕು. ಸಭೆ, ಸಮಾರಂಭಗಳು, ಕಾರ್ಯಕ್ರಮಗಳಲ್ಲಿ ಕೋವಿಡ್‌ ನಿಯಮಗಳ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ಇಂಥ ಕಾರ್ಯಕ್ರಮಗಳಲ್ಲಿ ಕಡಿಮೆ ಸಂಖ್ಯೆಯ ಜನರು ಭಾಗವಹಿಸುವಂತೆ ನೋಡಿಕೊಳ್ಳಬೇಕು. ಅಗತ್ಯಬಿದ್ದಲ್ಲಿ ಕೋವಿಡ್‌ ಪರೀಕ್ಷಾ ಪ್ರಮಾಣವನ್ನು ಜಾಸ್ತಿ ಮಾಡಬೇಕು. ಒಮಿಕ್ರಾನ್‌ ಹಾಗೂ ಇನ್ನಿತರೆ ವೈರಾಣು ಸೋಂಕು ಹರಡದಂತೆ ತಡೆಯಲು ಅಗತ್ಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಶಾಲೆಗಳಲ್ಲಿ ಕನಿಷ್ಠ ತಿಂಗಳಿಗೊಮ್ಮೆ ಶೇ.10ರಷ್ಟು ಮಕ್ಕಳಿಗೆ ಕೋವಿಡ್‌ ಪರೀಕ್ಷೆ ಮಾಡಬೇಕು,” ಎಂದು ಸೂಚನೆ ನೀಡಿದರು.

”ಕೋವಿಡ್‌ ರೂಪಾಂತರಿ ವೈರಾಣುವಿನಿಂದ ವಿಶ್ವದಾದ್ಯಂತ ಸಾಕಷ್ಟು ಬದಲಾವಣೆಗಳು ಆಗುತ್ತಿವೆ. ಆದ ಕಾರಣ, ತಜ್ಞರ ಸಮಿತಿಯು ನೀಡಿದ ಸೂಚನೆಯಂತೆ ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ಪರೀಕ್ಷೆ ಮಾಡಿ, ಕ್ವಾರಂಟೈನ್‌ಗೆ ಒಳಪಡಿಸಬೇಕು. ಸಂಗ್ರಹಿಸಿದ ಮಾದರಿಗಳನ್ನು ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು. ನಗರದಲ್ಲಿನ ಕಂಟೈನ್ಮೆಂಟ್‌ ವಲಯಗಳ ಮೇಲೆ ಹೆಚ್ಚಿನ ನಿಗಾ ಇಡಬೇಕು,” ಎಂದರು.

ಈ ಸಂದರ್ಭದಲ್ಲಿ ಪಾಲಿಕೆಯ ವಿಶೇಷ ಆಯುಕ್ತ(ಆರೋಗ್ಯ) ಡಾ. ತ್ರಿಲೋಕ್‌ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್‌, ನಿರ್ಮಲಾ ಬುಗ್ಗಿ ಮತ್ತಿತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button