shikshanaಇತ್ತೀಚಿನ ಸುದ್ದಿಸುದ್ದಿ

ಚಾಮರಾಜನಗರ ವಿಶ್ವವಿದ್ಯಾಲಯಕ್ಕೆ ಬೀಗ?

ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ನಿರ್ಧರಿಸಲಾಗಿದೆ. ಇದರಿಂದ ಚಾಮರಾಜನಗರದ ನೂತನ ವಿಶ್ವವಿದ್ಯಾಲಯದ ಭವಿಷ್ಯ ಅನಿಶ್ಚಿತವಾಗಿದೆ. ಈ ವಿಶ್ವವಿದ್ಯಾಲಯದ ಮುಚ್ಚುವುದರಿಂದ ಗಡಿ ಮತ್ತು ಕಾಡಂಚಿನ ಪ್ರದೇಶಗಳ ಹಿಂದುಳಿದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಅಡ್ಡಿಯಾಗಲಿದೆ. ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಯಲ್ಲಿ ಈ ವಿಶ್ವವಿದ್ಯಾಲಯದ ಅಗತ್ಯತೆ ಹೆಚ್ಚಾಗಿದೆ.

ಇತ್ತೀಚೆಗೆ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ರಾಜ್ಯದಲ್ಲಿ ಹೊಸದಾಗಿ ಸ್ಥಾಪಿಸಲಾಗಿದ್ದ 9 ವಿಶ್ವವಿದ್ಯಾಲಯಗಳನ್ನು (Karnataka 9 New University) ಮುಚ್ಚಲು ತೀರ್ಮಾನಿಸಲಾಗಿದೆ. ಇದರಿಂದ ಗಡಿನಾಡು ಚಾಮರಾಜನಗರ ವಿಶ್ವವಿದ್ಯಾಲಯದ (Chamrajnagar University) ಭವಿಷ್ಯವೂ ಡೋಲಾಯಮಾನವಾಗಿದ್ದು ಉನ್ನತ ಶಿಕ್ಷಣದ ಕನಸು ಹೊತ್ತ ಆದಿವಾಸಿ ಬಡ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ.ರಾಜ್ಯದ ಉನ್ನತ ಶಿಕ್ಷಣ ನೋಂದಣಿ ಸರಾಸರಿ ಶೇಕಡಾ 36 ರಷ್ಟಿದ್ದರೆ ಚಾಮರಾಜನಗರ ಜಿಲ್ಲೆಯಲ್ಲಿ ಉನ್ನತ ಶಿಕ್ಷಣದ ನೋಂದಣಿ ಕೇವಲ ಶೇಕಡಾ 10.08 ಮಾತ್ರ ಇದ್ದು ಕಳವಳಕಾರಿಯಾಗಿದ್ದು ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊಂದಿದೆ. ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ಸೂಚ್ಯಂಕದಲ್ಲೂ ಇದು ಪ್ರಸ್ತಾಪವಾಗಿದೆ. ಜಿಲ್ಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಇಲ್ಲದಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.ಜಿಲ್ಲೆಯಾದ ಎಷ್ಟೋ ವರ್ಷಗಳ ನಂತರ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜುಗಳು ತಲೆ ಎತ್ತಿವೆ. ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂಬ ಅಪಖ್ಯಾತಿ ಹೊಂದಿದ್ದ ಚಾಮರಾಜನಗರ ‌ಜಿಲ್ಲೆಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಹಿಂದಿನ ಬಿಜೆಪಿ ಸರ್ಕಾರ 2023 ರಲ್ಲಿ ಚಾಮರಾಜನಗರ ವಿಶ್ವ ವಿದ್ಯಾಲಯ ಸ್ಥಾಪಿಸಿತ್ತು. ಆ ಮೂಲಕ ಜಿಲ್ಲೆಯ ಹಿಂದುಳಿದ, ದಲಿತ ಹಾಗು ಕಾಡಂಚಿನ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಪೂರಕ ವಾತಾವರಣ ಸೃಷ್ಟಿಯಾಗಿತ್ತು.ಆದರೆ, ಇದೀಗ ಚಾಮರಾಜನಗರ ವಿಶ್ವವಿದ್ಯಾಲಯ ಸೇರಿದಂತೆ 9 ವಿಶ್ವ ವಿದ್ಯಾಲಯಗಳನ್ನು ‌ಮುಚ್ಚುಲು‌ ಸರ್ಕಾರ ನಿರ್ಧಾರ ಕೈಗೊಂಡಿರುವುದರಿಂದ ಉನ್ನತ ಶಿಕ್ಷಣ ಪಡೆಯಬೇಕೆನ್ನುವ ಗಡಿ ಜಿಲ್ಲೆಯ ಹಿಂದುಳಿದ, ದಲಿತ ಹಾಗೂ ಕಾಡಂಚಿನ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ.

ಈ ಹಿಂದೆ ಚಾಮರಾಜನಗರ ಜಿಲ್ಲೆಯ ವಿದ್ಯಾರ್ಥಿಗಳು ದೂರದ ಮೈಸೂರು ವಿಶ್ವ ವಿದ್ಯಾಲಯವನ್ನು ಅವಲಂಬಿಸಿ ಉನ್ನತ ಶಿಕ್ಷಣ ಪಡೆಯಬೇಕಾದ ಅನಿವಾರ್ಯತೆ ಇತ್ತು. ಆದರೆ ಚಾಮರಾಜನಗರಕ್ಕೆ ಪ್ರತ್ಯೇಕ ವಿಶ್ವವಿದ್ಯಾಲಯ ಆದ ಮೇಲೆ ಸ್ನಾತ್ತಕೋತ್ತರ ಪದವಿಗೆ ವಿದ್ಯಾರ್ಥಿಗಳ ಪ್ರವೇಶಾತಿಯೂ ಹೆಚ್ಚಾಗಿತ್ತು. ಸ್ವಂತ ಜಿಲ್ಲೆ ಹಾಗೂ ಹತ್ತಿರ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆದಿದ್ದಾರೆ. ಪ್ರಸ್ತುತ ಚಾಮರಾಜನಗರ ನೂತನ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ 22 ಪದವಿ ಕಾಲೇಜುಗಳಿದ್ದು 7 ಸಾವಿರಕ್ಕು ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸ್ನಾತಕೋತ್ತರ ಕೇಂದ್ರದಲ್ಲಿ 700 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಸ್ನಾತ್ತಕೋತ್ತರ ಕೇಂದ್ರದಲ್ಲಿ ಹೆಚ್ಚು ವಿದ್ಯಾರ್ಥಿನಿಯರೇ ಇರುವುದು ಗಮನಾರ್ಹವಾಗಿದೆ.ಗಡಿ ಭಾಗದ ಹಾಗೂ ಕಾಡಂಚಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆದಿದ್ದಾರೆ. ರಾಜ್ಯದಲ್ಲಿ ಹೊಸದಾಗಿ ಸ್ಥಾಪಿಸಲಾಗಿದ್ದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಇತ್ತೀಚೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದರಲ್ಲಿ ಚಾಮರಾಜನಗರ ವಿಶ್ವ ವಿದ್ಯಾಲಯವೂ ಸೇರಿದೆ. ಕೇವಲ ಎರಡು ವರ್ಷಗಳ ಹಿಂದಷ್ಟೇ ಅಸ್ತಿತ್ವಕ್ಕೆ ಬಂದ ನೂತನ ವಿಶ್ವವಿದ್ಯಾನಿಲಯ ಎಲ್ಲಿ ರದ್ದಾಗಿಬಿಡುತ್ತದೋ ಎಂಬ ಆತಂಕ ವಿದ್ಯಾರ್ಥಿಗಳಲ್ಲಿ ಮನೆ ಮಾಡಿದೆ.ಒಂದು ವೇಳೆ ಚಾಮರಾಜನಗರ ವಿಶ್ವವಿದ್ಯಾಲಯವನ್ನು ಮತ್ತೆ ಮೈಸೂರುವಿಶ್ವವಿದ್ಯಾಲಯದೊಂದಿಗೆ ವಿಲೀನ ಮಾಡಿದರೇ ಬಹುತೇಕ ಹೆಣ್ಣುಮಕ್ಕಳು ಹಾಗೂ ಗಡಿಭಾಗದ ವಿದ್ಯಾರ್ಥಿಗಳು ಶಿಕ್ಷಣ ಮೊಟಕುಗೊಳಿಸುವ ಸಾಧ್ಯತೆಗಳು ಕಂಡುಬರುತ್ತಿವೆ. ದೂರದ ಮೈಸೂರಿಗೆ ಹೋಗಲಾಗದೆ ಉನ್ನತ ಶಿಕ್ಷಣದಿಂದ ವಂಚಿತರಾಗುವ ಆತಂಕವು ಸೃಷ್ಟಿಯಾಗಿದೆ.ಹಿಂದುಳಿದ ಪ್ರದೇಶಗಳಲ್ಲಿ ಜಿಲ್ಲೆಗೊಂದು ವಿಶ್ವವಿದ್ಯಾನಿಲಯ ಬೇಕು ಎಂದು ಯುಜಿಸಿ ಹೇಳುತ್ತದೆ ಚಾಮರಾಜನಗರ ಶೈಕ್ಷಣಿಕವಾಗಿ ಹಿಂದುಳಿದಿದೆ. ಜಿಲ್ಲೆಯ ಶೈಕ್ಷಣಿಕ ಉನ್ನತಿಗಾಗಿ ಪ್ರತ್ಯೇಕ ವಿಶ್ವವಿದ್ಯಾಲಯ ಅತ್ಯಗತ್ಯ. ಇದರಿಂದ ಗಡಿ ಹಾಗೂ ಕಾಡಂಚಿನ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸುಲಭವಾಗಿ ಸಿಗಲಿದೆ, ಅಲ್ಲದೆ ಇಲ್ಲಿನ ಹಿಂದುಳಿದ, ದಲಿತ ಹಾಗೂ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲಿದೆ ಹೀಗಾಗಿ ಚಾಮರಾಜನಗರ ಪ್ರತ್ಯೇಕಕ್ಕೆ ವಿಶ್ವವಿದ್ಯಾಲಯ ಉಳಿಯಲೇಬೇಕು ಎಂದು ಸಂಘ ಸಂಸ್ಥೆಗಳು ಪ್ರತಿಭಟನೆಯನ್ನು ನಡೆಸಿವೆ.

Related Articles

Leave a Reply

Your email address will not be published. Required fields are marked *

Back to top button