ರಾಜ್ಯ

ಮತಾಂತರ ನಿಷೇಧ ಕಾಯ್ದೆ ಹಿಂದೆ ರಾಜಕೀಯ ದುರದ್ದೇಶ ಅಡಗಿದೆ : ಸಿದ್ದರಾಮಯ್ಯ

ಬೆಳಗಾವಿ ,ಡಿ.17- ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೈಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯ್ದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಸುವುದಾಗಿ ತಿಳಿಸಿದರು.

ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯಿದೆ ಹಿಂದೆ ಜನರ ಹಿತವೇನೂ ಇಲ್ಲ. ದೇಶದ ಕೋಮು ಸೌಹಾರ್ದ ಹಾಳು ಮಾಡುವುದೇ ಇದರ ಉದ್ದೇಶ. ಕಾಂಗ್ರೆಸ್ ಪಕ್ಷ ಸದಾ ಕ್ರಿಶ್ಚಿಯನ್ ಸಮುದಾಯದ ಜೊತೆಗಿರುತ್ತದೆ. ಈ ಸಮುದಾಯದವರಿಗೆ ತೊಂದರೆಯಾಗಲು ಅವಕಾಶ ನೀಡುವುದಿಲ್ಲ ಎಂದರು.

ಸಂವಿಧಾನದ ಪ್ರಕಾರ ದೇಶದ ಪ್ರಜೆ ತನ್ನ ಆಸಕ್ತಿ ಹಾಗೂ ಇಚ್ಚೆಗೆ ಸೂಕ್ತವಾದ ಧರ್ಮವನ್ನು ಆರಿಸಿಕೊಳ್ಳುವ, ಪಾಲಿಸುವ ಮತ್ತು ಸಂಭ್ರಮಿಸುವ ಹಕು ಇದೆ. ಇದಕ್ಕೆ ವಿರುದ್ಧವಾಗಿ ಸರ್ಕಾರ ಕಾನೂನು, ಕಾಯಿದೆ ತರುವುದು ಸಂವಿಧಾನಬಾಹಿರ.. ತಮಗೆ ಬಹುಮತ ಇದೆ ಎನ್ನುವ ಕಾರಣಕ್ಕೆ ಸಂವಿಧಾನದ ಮೇಲೆ ಸವಾರಿ ಮಾಡುವ ಹಾಗೂ ತನಗೆ ಬೇಕಾದ ಕಾಯಿದೆಗಳನ್ನು ಜಾರಿಗೆ ತರುವ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಬಾರದು.

ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ ಸಮಾನ ಅವಕಾಶ ನೀಡಲಾಗಿದೆ. ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ಈ ಸಮುದಾಯದವರು ನಡೆಸುವ ಶಾಲೆ, ಕಾಲೇಜು, ಆಸ್ಪತ್ರೆಗಳಿಗೆ ಒಂದು ಸಮುದಾಯದವರು ಮಾತ್ರ ಹೋಗುವುದಿಲ್ಲ. ಹೋಗುವ ಎಲ್ಲರೂ ಮತಾಂತರ ಆಗಿಲ್ಲ. ಅದಕ್ಕಾಗಿ ಬಲವಂತವೂ ನಡೆಯುತ್ತಿಲ್ಲ.

ತಮಗೆ ಇಷ್ಟವಾದ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ದೇಶದ ಪ್ರಜೆಗಳಿಗೆ ಇದೆ. ಯಾವುದೋ ಒಂದು ಧರ್ಮವನ್ನು ಆಧಾರವಾಗಿಟ್ಟುಕೊಂಡು ಸಂವಿಧಾನ ರಚನೆ ಮಾಡಿಲ್ಲ. ಸಂವಿಧಾನದಿಂದ ಒಳ್ಳೆಯದು ಆಗಬೇಕು ಎಂದಾದರೆ ಆಡಳಿತ ಒಳ್ಳೆಯವರ ಕೈಯ್ಯಲ್ಲೇ ಇರಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದರು.

ಬಿಜೆಪಿಯವರಿಗೆ ಚತುವರ್ಣ ವ್ಯವಸ್ಥೆಯಲ್ಲಿ ನಂಬಿಕೆ ಹೆಚ್ಚು. ಹೀಗಾಗಿಯೇ ಇಂಥ ಕಾಯಿದೆಗಳ ಜಾರಿಗೆ ಮುಂದಾಗಿದೆ. ಇದರಲ್ಲಿ ಆರ್ ಎಸ್ ಎಸ್ ನ ಹುನ್ನಾರವೂ ಅಡಗಿದೆ. ದಯೆಯೇ ಧರ್ಮದ ಮೂಲ ಎಂದು ಬಸವಣ್ಣ ಅವರು ಹೇಳಿದ್ದರು. ಆದರೆ ಅದಕ್ಕೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ.

ರಾಜ್ಯದಲ್ಲಿ ಚರ್ಚ್ಗಳ ಮೇಲೆ ಅನಗತ್ಯವಾಗಿ ದಾಳಿಯಾಗುತ್ತಿದೆ. ನಮ್ಮ ಸರ್ಕಾರ ಇದ್ದಾಗ ಅದಕ್ಕೆ ಅವಕಾಶ ಕೊಟ್ಟಿರಲಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಶಾಸಕರಾದ ರಾಜೇಗೌಡ, ವಿಜಯಸಿಂಗ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ, ಭಾರತೀಯ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಡಾ. ಸಜ್ಜನ್ ಜಾರ್ಜ್ ಮತ್ತಿತರರು ಭಾಗವಹಿಸಿದ್ದರು

Related Articles

Leave a Reply

Your email address will not be published. Required fields are marked *

Back to top button