ಮತ್ತೆ ಬಿಎಸ್‌ವೈ ಆಪ್ತರಿಗೆ ಮಣೆ..!
ಬೆಂಗಳೂರು, ಸೆ.30- ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಿಗೆ ಮಣೆ ಹಾಕಲಾಗಿದೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ, ಶೃಂಗೇರಿಯ ಮಾಜಿ ಶಾಸಕ ಡಿ.ಎನ್. ಜೀವರಾಜು ಅವರುಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಇಬ್ಬರಿಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ರೇಣುಕಾಚಾರ್ಯ ಹಾಗೂ ಜೀವರಾಜ್ ಇಬ್ಬರೂ ಯಡಿಯೂರಪ್ಪ ಆಪ್ತ ಬಣದಲ್ಲಿ ಗುರುತಿಸಿಕೊಂಡವರು. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರವೂ ಸರ್ಕಾರದ ಮೇಲೆ ಹಿಡಿತ ಇಟ್ಟುಕೊಂಡಿರುವುದು ಮತ್ತೊಮ್ಮೆ ಸಾಬೀತಾಗಿದೆ.
ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಇಬ್ಬರನ್ನು ಸಿಎಂ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.
ಬದಲಾದ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರ ಅಧಿಕಾರಾವಧಿಯಲ್ಲಿ ನೇಮಕಗೊಂಡಿದ್ದ ಕೆಲವು ಹುದ್ದೆಗಳನ್ನು ರದ್ದುಪಡಿಸಲಾಗಿತ್ತು.
ಇದೀಗ ಹಂತಹಂತವಾಗಿ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಸರ್ಕಾರದ ಆಯಕಟ್ಟಿನಲ್ಲಿ ಪ್ರಮುಖ ಸ್ಥಾನಮಾನಗಳನ್ನು ನೀಡಿಸಲು ಮುಂದಾಗಿರುವುದು ಇದರಿಂದ ಸ್ಪಷ್ಟವಾಗಿದೆ.