
ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ತಾಲೂಕು ಆಡಳಿತ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ. ಆದರೆ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ. ಈ ಕುರಿತು ಹೊಸನಗರ ಹಾಗೂ ಸಾಗರ ತಾಲೂಕುಗಳ ತಹಶೀಲ್ದಾರರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಎರಡು ತಾಲೂಕುಗಳಲ್ಲಿ ಪ್ರತಿ ವರ್ಷ ಉತ್ತಮ ಮಳೆಯಾಗುತ್ತದೆ. ಮಳೆಯಿಂದ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗಬಹುದೆಂಬ ಹಿನ್ನೆಲೆಯಲ್ಲಿ, ತಾಲೂಕು ಆಡಳಿತಗಳು ತಮ್ಮ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ. ಹೀಗಾಗಿ, ಮುಂದಿನ ದಿನಗಳಲ್ಲಿ ಶನಿವಾರದಂದು ಪೂರ್ಣ ತರಗತಿಗಳನ್ನು ನಡೆಸಲಾಗುವುದೆಂದು ತಿಳಿಸಲಾಗಿದೆ.
ಉತ್ತರ ಕನ್ನಡದಲ್ಲೂ ಶಾಲಾ-ಕಾಲೇಜುಗಳಿಗೆ ರಜೆ: ಉತ್ತರ ಕನ್ನಡ ಜಿಲ್ಲೆಯಲ್ಲೂ ಭರ್ಜರಿ ಮಳೆಯಾಗುತ್ತಿದ್ದು, ನಿನ್ನೆ ಮತ್ತು ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (28-08-2025) ರಜೆ ನೀಡಲಾಗಿದೆ. ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಪ್ರಕಟಣೆ ಹೊರಡಿಸಲಾಗಿದೆ.
ರಾಜ್ಯಾದ್ಯಂತ ಮತ್ತೆ ಮಳೆ: ಹವಾಮಾನ ಇಲಾಖೆ ರಾಜ್ಯದಲ್ಲಿ ಆಗಸ್ಟ್ 27ರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿತ್ತು. ಮುನ್ಸೂಚನೆ ಪ್ರಕಾರ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ, ಸೆ.1ರ ವರೆಗೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿತ್ತು. ಆದರೆ ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಿರೀಕ್ಷೆಗೂ ಅಧಿಕ ಮಳೆಯಾಗುತ್ತಿದೆ.
ಜೊತೆಗೆ, ಉಳಿದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ವಿಜಯನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಲ್ಲಿಯೂ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿತ್ತು.


