ಬೆಂಗಳೂರು, ನ.18- ವಿಧಾನ ಪರಿಷತ್ ಚುನಾವಣೆಗೆ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಅಭ್ಯರ್ಥಿಗಳ ಪಟ್ಟಿ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆಯೊಳಗೆ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರ ಅನುಮೋದನೆಗೆ ಕಳುಹಿಸಿದ್ದೇವೆ. ಇಂದು ಸಂಜೆ ಅಥವಾ ನಾಳೆಯೊಳಗೆ ನಮಗೆ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.
ಈಗಾಗಲೇ ಪಕ್ಷದ ಅಧ್ಯಕ್ಷರು ಹಾಗೂ ಮುಖಂಡರ ಜತೆ ಚರ್ಚಿಸಿ ಪಟ್ಟಿಯನ್ನು ಕಳುಹಿಸಿಕೊಟ್ಟಿದ್ದೇವೆ. ವರಿಷ್ಠರು ಪರಿಶೀಲಿಸಿ ಯಾವುದೇ ಸಂದರ್ಭದಲ್ಲೂ ಬಿಡುಗಡೆ ಮಾಡುವ ಸಂಭವವಿದೆ ಎಂದರು.
ಶೀಘ್ರ ಬಿಡುಗಡೆ: ರಾಜ್ಯದ ನಾನಾಕಡೆ ಭಾರೀ ಮಳೆಯಿಂದ ಬೆಳೆ ಹಾನಿಯಾಗಿರುವ ಕುರಿತಂತೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಈಗಾಗಲೇ ನಾನು ಅvಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಎಲ್ಲೆಲ್ಲಿ ಮಳೆಯಿಂದ ಹಾನಿಗೊಳಗಾಗಿದೆಯೋ ಅಂತಹ ಕಡೆ ಅಧಿಕಾರಿಗಳು ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದರು.
ಮಳೆ ಬಂದ ತಕ್ಷಣವೇ ನಾನು ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಸಮೀಕ್ಷೆ ನಡೆಸಲು ಸೂಚಿಸಿದ್ದೆ. ವರದಿ ಬಂದ ತಕ್ಷಣವೇ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಇಂದಿನಿಂದ ರಾಜ್ಯದಲ್ಲಿ ಪಕ್ಷದ ವತಿಯಿಂದ ಜನ ಸ್ವರಾಜ್ ಸಮಾವೇಶವನ್ನು ನಡೆಸುತ್ತಿದ್ದೇವೆ. ಇಂದು ನಾನು ಕೊಪ್ಪಳದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟಿಲ್ ಸೇರಿದಂತೆ ಮತ್ತಿತರರು ಭಾಗಿಯಾಗಲಿದ್ದೇವೆ ಎಂದು ತಿಳಿಸಿದರು.
ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಒಟ್ಟು ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ವಿಧಾನ ಪರಿಷತ್‍ಗೆ ಸ್ರ್ಪಸಲಿರುವ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುವಂತೆ ಮತದಾರರಿಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ವಿವರಿಸಿದರು.
ಒಟ್ಟು ನಾಲ್ಕು ತಂಡಗಳು ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ. ಚುನಾಯಿತ ಪ್ರತಿನಿಗಳನ್ನು ಭೇಟಿಯಾಗಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಮನವಿ ಮಾಡುವರು. ನಾನು 22ರಂದು ಮಡಿಕೇರಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗುವುದಾಗಿ ಹೇಳಿದರು.