ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಮೂಲಸೌಕರ್ಯಕ್ಕೆ ಆದ್ಯತೆ: ಶಿಕ್ಷಣ ಸಚಿವ ಬಿಸಿ ನಾಗೇಶ್
ವಿ. ಸೋಮಣ್ಣ ಪ್ರತಿಷ್ಠಾನದ ವತಿಯಿಂದ ಬೆಂಗಳೂರಿನ ವಿಜಯ ನಗರದಲ್ಲಿರುವ ಡಾ. ಶ್ರೀ. ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಭಾನುವಾರ (ಜೂನ್ 5) ಆಯೋಜಿಸಲಾಗಿದ್ದ ‘ವಿಶ್ವ ಪರಿಸರ ದಿನ’ ಹಾಗೂ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಸಚಿವ ನಾಗೇಶ್ ಅವರು ಮಾತನಾಡಿದರು.
“ಕಳೆದ ವರ್ಷ ಕೋವಿಡ್-19 ಭೀತಿಯ ಕಾರಣ ದೇಶದ ಹಲವು ರಾಜ್ಯಗಳಲ್ಲಿ ಶಾಲೆಗಳ ಪುನರಾರಂಭಕ್ಕೆ ಹಿಂಜರಿಕೆ ಇತ್ತು. ಇಂತಹ ಸನ್ನಿವೇಶದಲ್ಲಿ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕರ್ನಾಟಕದಲ್ಲಿ ಶಾಲೆಗಳನ್ನು ಪುನರಾರಂಭಿಸಲಾಯಿತು. ಶಿಕ್ಷಕರು, ಪಾಲಕರ ಸಹಕಾರದಿಂದ ತರಗತಿಗಳು ನಡೆದವು. ಶಾಲಾ ಶಿಕ್ಷಣದಲ್ಲಿ ಮಹತ್ವದ ಘಟ್ಟವಾಗಿರುವ ಎಸ್ಎಸ್ಎಲ್ ಪರೀಕ್ಷೆ ಸುಸೂತ್ರವಾಗಿ ನಡೆದು, ಉತ್ತಮ ಫಲಿತಾಂಶವು ಹೊರ ಬಂದಿದೆ. ಮಕ್ಕಳು ಮುಂದಿನ ಶೈಕ್ಷಣಿಕ ಜೀವನಕ್ಕೆ ಅಣಿಯಾಗುತ್ತಿದ್ದಾರೆ” ಎಂದು ಸಚಿವರು ನುಡಿದರು.
ಶಿಕ್ಷಕರ ಕೊರತೆ ನಿವಾರಣೆಗೆ ಅತಿಥಿ ಶಿಕ್ಷಕರ ನೇಮಕ ‘ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 7 ಸಾವಿರ ಕೊಠಡಿಗಳನ್ನು ನಿರ್ಮಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಶಿಥಿಲಗೊಂಡಿರುವ ಕೊಠಡಿಗಳನ್ನು ಆದ್ಯತೆ ಮೇರೆಗೆ ರಿಪೇರಿ, ಮರು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಚಾಲ್ತಿಯಲ್ಲಿದೆ. ನೇಮಕಾತಿ ಪರೀಕ್ಷೆ ಮುಗಿದು, ಈಗಾಗಲೇ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಶಿಕ್ಷಕರ ಕೊರತೆ ಇರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಸೇವೆ ಪಡೆದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಶಾಲೆ ಆರಂಭದ ದಿನಗಳಲ್ಲೇ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಹೀಗಾಗಿ, ಈ ವರ್ಷ ಶಿಕ್ಷಕರ ಕೊರತೆ ಎದುರಾಗುವುದಿಲ್ಲ’ ಎಂದು ಸಚಿವರು ಹೇಳಿದರು.
ಶಾಲೆಗೆ ಬರುವ ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಏರಿಕೆ ‘ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದರು. ಸರ್ವ ಶಿಕ್ಷಣ ಅಭಿಯಾನದ ಮೂಲಕ ದೇಶದ ಮೂಲೆ ಮೂಲೆಗಳಲ್ಲಿ ಶಾಲೆಗಳನ್ನು ಆರಂಭಿಸಿ ಅಕ್ಷರ ಕ್ರಾಂತಿಗೆ ನಾಂದಿ ಹಾಡಿದರು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಾಯಿತು. ಶೌಚಗೃಹಗಳ ನಿರ್ಮಾಣಕ್ಕೆ ವೇಗ ನೀಡಲಾಯಿತು. ಇದರಿಂದ ಶಾಲೆಗೆ ಬರುವ ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಯಿತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ಬಂದ ಬಳಿಕ ಮತ್ತೆ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಯಿತು’ ಎಂದು ಶಿಕ್ಷಣ ಸಚಿವರು ತಿಳಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಷ್ಠಾನ
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ತರಲು ಹಿರಿಯ ವಿಜ್ಞಾನ ಕಸ್ತೂರಿ ರಂಗನ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಯಿತು. ಸುಧೀರ್ಘ ಕಾಲ ಅಧ್ಯಯನ, ಚರ್ಚೆಯ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಂದು ರೂಪ ನೀಡಿ ಅಂತಿಮಗೊಳಿಸಲಾಯಿತು. ಭಾರತದ ವರ್ತಮಾನ ಮತ್ತು ಭವಿಷ್ಯಕ್ಕೆ ಅಗತ್ಯವಾಗಿರುವ ಶಿಕ್ಷಣ ನೀಡಬೇಕು ಹಾಗೂ ಸಂಸ್ಕಾರ ಮತ್ತು ಭಾರತೀಯತೆಯನ್ನು ಒಳಗೊಂಡ ಶಿಕ್ಷಣ ನೀಡಲು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನಗೊಳಿಸಲಾಗುತ್ತಿದೆ. ಈ ಶೈಕ್ಷಣಿಕ ವರ್ಷದಿಂದಲೇ ಅಂಗನವಾಡಿಗಳಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಪಠ್ಯಕ್ರಮ ಅನುಸಾರ ಶಿಕ್ಷಣ ನೀಡುವ ಗುರಿ ಹೊಂದಲಾಗಿದೆ. ಹಂತ ಹಂತವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020′ ಅನುಷ್ಠಾನಗೊಳಿಸಲಾಗುತ್ತದೆ. ಅದಕ್ಕಾಗಿ ಕೈಗೊಂಡಿರುವ ಸಿದ್ಧತೆಗಳಿಗೆ ಕೇಂದ್ರ ಶಿಕ್ಷಣ ಇಲಾಖೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಎನ್‌ಇಪಿ ಅನುಷ್ಠಾನಕ್ಕಾಗಿ ಪೊಸಿಷನ್ ಪೇಪರ್‌ಗಳನ್ನು ಸಿದ್ಧಪಡಿಸಿ ಕೇಂದ್ರ ಶಿಕ್ಷಣ ಇಲಾಖೆಗೆ ಸಲ್ಲಿಸಲಾಗಿದೆ’ ಎಂದು ಸಚಿವರು ಹೇಳಿದರು.
ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ‘ಹಿರಿಯ ಸಚಿವರಾದ ವಿ. ಸೋಮಣ್ಣ ತಮ್ಮ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಬಡವರು, ಹಿಂದುಳಿದ ವರ್ಗಗಳ ಮಕ್ಕಳ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಒಳ್ಳೆಯ ಶಾಲೆಗಳ ನಿರ್ಮಾಣಕ್ಕೆ ಕಾರಣರಾಗಿದ್ದಾರೆ’ ಎಂದು ಸಚಿವ ನಾಗೇಶ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಅ. ದೇವೇಗೌಡ ಹಾಗೂ ವಿ. ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಶೈಲಜಾ ಸೋಮಣ್ಣ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು