
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮಾರ್ಚ್ 22 ರಿಂದ ಆರಂಭವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕನ್ನಡಿಗರನ್ನು, ಕನ್ನಡ ಅಸ್ಮಿತೆಯನ್ನು ನಿರ್ಲಕ್ಷಿಸುತ್ತಿದ್ದಾರೆ ಎಂಬ ಆರೋಪ ಈ ಹಿಂದಿನಿಂದಲೂ ಕೇಳಿ ಬರುತ್ತಿತ್ತು. ಅದರಲ್ಲೂ ಆರ್ಸಿಬಿ ಕನ್ನಡವನ್ನು ಬಳಸುತ್ತಿಲ್ಲ, ಕನ್ನಡಿಗರನ್ನು ಪ್ರತಿನಿಧಿಸುತ್ತಿಲ್ಲ ಎಂದು ಅನೇಕರು ಹಲವು ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶವನ್ನು ಹೊರಹಾಕಿದ್ದರು. ಆದರೆ ಈ ಬಾರಿ ಆರ್ಸಿಬಿ ಫ್ರಾಂಚೈಸಿ ಅಂತಹ ತಪ್ಪು ಮಾಡಿಲ್ಲ ಎನ್ನಬಹುದು.ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ಕನ್ನಡ ಹಾಡುಗಳನ್ನು ಪ್ಲೇ ಮಾಡಿದ್ದಾರೆ. ಅಲ್ಲದೆ ಕರುನಾಡ ರಾಜರತ್ನ ಪುನೀತ್ ರಾಜ್ಕುಮಾರ್ ಅವರಿಗೆ ವಿಶೇಷ ಗೌರವವನ್ನು ಸಹ ಸಲ್ಲಿಸಿದ್ದಾರೆ.ಇವೆಲ್ಲದರ ಜೊತೆಗೆ ಮೈದಾನದಲ್ಲಿ ಕನ್ನಡ ಬಾವುಟ ಕೂಡ ರಾರಾಜಿಸಿದೆ. ಗಾಯಕ ಆಲ್ ಓಕೆ ಕನ್ನಡ ಹಾಡು ಹಾಡುತ್ತಿದ್ದಂತೆ ಚಿನ್ನಸ್ವಾಮಿ ಮೈದಾನದಲ್ಲಿ ಕೆಂಪು ಮತ್ತು ಹಳದಿ ಧ್ವಜ ಕಾಣಿಸಿಕೊಂಡಿದೆ. ಒಂದಾರ್ಥದಲ್ಲಿ ಇದೇ ಮೊದಲ ಬಾರಿಗೆ ಆರ್ಸಿಬಿ ಅಂಗಳವು ಕನ್ನಡತನದಿಂದ ಕೂಡಿತ್ತು ಎನ್ನಬಹುದು.ಇತ್ತ ಆರ್ಸಿಬಿ ಫ್ರಾಂಚೈಸಿಯ ಈ ನಡೆಯಿಂದ ಅಭಿಮಾನಿಗಳು ಕೂಡ ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕನ್ನಡ ಧ್ವಜವನ್ನು ಹಾರಿಸಿದಕ್ಕೆ ಹಲವರು ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.ಒಟ್ಟಿನಲ್ಲಿ ಆರ್ಸಿಬಿ ಫ್ರಾಂಚೈಸಿ ಕನ್ನಡವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂಬ ಆರೋಪಕ್ಕೆ ಇದೀಗ ಕನ್ನಡತನದೊಂದಿಗೆ ಉತ್ತರ ಕೊಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಎನ್ನಬಹುದು.ಇನ್ನು ಆರ್ಸಿಬಿ ತಂಡವು ಈ ಬಾರಿಯ ಐಪಿಎಲ್ನ ಉದ್ಘಾಟನಾ ಪಂದ್ಯದ ಮೂಲಕ ಅಭಿಯಾನ ಆರಂಭಿಸಲಿದೆ. ಮಾರ್ಚ್ 22 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಣಕ್ಕಿಳಿಯಲಿದೆ.ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ತನ್ನ ಮೊದಲ ಪಂದ್ಯವಾಡುವುದು ಮಾರ್ಚ್ 28 ರಂದು. ಈ ಪಂದ್ಯದಲ್ಲಿ ಆರ್ಸಿಬಿ ಪಡೆ ತನ್ನ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್ಗಿಡಿ.