ಡಿಸೆಂಬರ್ 4ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ನವೆಂಬರ್ 30: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 4ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ.
ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ ಮುಂದುವರೆಯಲಿದೆ.
ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಯಾವುದೇ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನಾವು ನೀಡಿಲ್ಲ. ನಮ್ಮ ಪ್ರಕಾರ ಅಲ್ಲಲ್ಲಿ ಅಲ್ಪಸ್ವಲ್ಪ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಇಂದು ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಲಕ್ಷದ್ವೀಪ ಮತ್ತು ಕರ್ನಾಟಕದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಲಡಾಖ್, ಗೋವಾ, ತೆಲಂಗಾಣ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಐಎಂಡಿ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕವು ತಿಂಗಳಿಗೆ 292 ರಷ್ಟು ಹೆಚ್ಚುವರಿ ಮಳೆಯನ್ನು ಪಡೆದಿದೆ. ಈ ವಿಪರೀತ ಮಳೆಯು ಭಾರೀ ಪ್ರವಾಹವನ್ನು ಉಂಟುಮಾಡುತ್ತದೆ, ಇದು ಜೀವಹಾನಿ ಮತ್ತು ಆಸ್ತಿ ಹಾನಿಗೆ ಕಾರಣವಾಗುತ್ತದೆ ಎನ್ನಲಾಗಿದೆ. ಈಶಾನ್ಯ ಮುಂಗಾರಿನಿಂದ ದಕ್ಷಿಣ ಕರ್ನಾಟಕ, ಕೇರಳ, ತಮಿಳುನಾಡು, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ.