ಶಾಲೆಗಳಿಗೆ ರಜೆ ಇಲ್ಲ..!
ರಾಜ್ಯದ ಎರಡು ವಸತಿ ಕಾಲೇಜುಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಪ್ರಾಥಮಿಕ ಶಾಲೆಗಳ ಮಕ್ಕಳಲ್ಲಿ ಕೊರೊನಾ ಪತ್ತೆಯಾಗಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಬಿಜೆಪಿ ಜಿಲ್ಲಾ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ಶಾಲೆಗಳಿಗೆ ಬೇರೆ ಕಡೆಗಳಿಂದ ವಿದ್ಯಾರ್ಥಿಗಳು ಬಂದಿದ್ದರಿಂದ ಕೊರೊನಾ ಪತ್ತೆಯಾಗಿದೆ. ಪೋಷಕರು ಆತಂಕ ಪಡುವ ಅವಶ್ಯಕತೆ ಇಲ್ಲ, ಪ್ರತಿ ಅರ್ಧ ಗಂಟೆಗೊಮ್ಮೆ ಶಾಲೆ ಗಳಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದರು.
ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಆರೋಗ್ಯಕ್ಕೆ ಒತ್ತು ನೀಡಿದ್ದು, ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಿದೆ. ತಾಂತ್ರಿಕ ಸಲಹಾ ಸಮಿತಿ ಮೇಲ್ವಿಚಾರಣೆಯಲ್ಲಿ ಶಾಲೆಗಳು ನಡೆಯುತ್ತಿದೆ. ಸಲಹಾ ಸಮಿತಿ ಸೂಚನೆ ನೀಡಿದರೆ ಸಿಎಂ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರು ಕೋವಿಡ್ ನೆಗಟಿವ್ ರಿಪೋರ್ಟ್ ತರುವುದು ಕಡ್ಡಾಯವಾಗಿದೆ. ಸದ್ಯಕ್ಕೆ ಶಾಲೆಗಳಿಗೆ ರಜೆ ನೀಡುವ ಪ್ರಮೇಯವಿಲ್ಲ. ಓಮಿಕ್ರಾನ್ ಹೊಸ ವೈರಾಣು ಎನ್ನುವುದು ರಾಜ್ಯದಲ್ಲಿ ಪತ್ತೆಯಾಗಿಲ್ಲ. ಆತಂಕ ಪಡುವ ಪರಿಸ್ಥಿತಿ ಇಲ್ಲ ಎಂದು ಹೇಳಿದರು.
ತಾಂತ್ರಿಕ ಸಲಹಾ ಸಮಿತಿ ನಿರ್ಣಯ ಕೈಗೊಂಡರೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುವುದು ಎಂದ ಅವರು, ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದರು. ಸರ್ಕಾರಿ ವಸತಿ ಶಾಲೆಗಳಲ್ಲಿ ಇದುವರೆಗೆ ಯಾವುದೇ ಪ್ರಕರಣ ಪತ್ತೆಯಾಗಿಲ್ಲ, ಪೊಷಕರು ಸಹ ಕೋವಿಡ್ ಮುಂಜಾಗ್ರತಾ ಕ್ರಮ ವಹಿಸುವಂತೆ ಮನವಿ ಮಾಡಿದರು.