ಮೇಕೆದಾಟು ಯೋಜನೆಗೆ ಸಿಗಲಿದೆ ಒಪ್ಪಿಗೆ?
ನವದೆಹಲಿಯಲ್ಲಿ ಬುಧವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ. ಕರ್ನಾಟಕ ಸರ್ಕಾರದ ಪ್ರಸ್ತಾವಿತ ಮೇಕೆದಾಟು ಯೋಜನೆಗೆ ಸಭೆಯಲ್ಲಿ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಸಭೆ ಮೊದಲು ಜೂನ್ 16ಕ್ಕೆ ನಿಗದಿಯಾಗಿತ್ತು, ಬಳಿಕ ಜೂನ್ 23ಕ್ಕೆ ಮುಂದೂಡಲಾಗಿತ್ತು. ತಮಿಳುನಾಡು ಸರ್ಕಾರದ ಮನವಿಯ ಮೇರೆಗೆ ಪುನಃ ಜುಲೈ 6ಕ್ಕೆ ಸಭೆ ನಡೆಸಲು ದಿನಾಂಕ ನಿಗದಿ ಮಾಡಲಾಯಿತು.
ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಸಮತೋಲನ ಜಲಾಶಯವನ್ನು ನಿರ್ಮಾಣ ಮಾಡಿ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಮೇಕೆದಾಟು ಯೋಜನೆಯಾಗಿದೆ.
ಯೋಜನೆಯ ವಿಸ್ತೃತ ವರದಿ (ಡಿಪಿಆರ್) ಬಗ್ಗೆ ಸಭೆಯಲ್ಲಿ ವಿವರವಾದ ಚರ್ಚೆ ನಡೆಯಲಿದೆ. ಡಿಪಿಆರ್‌ಗೆ ಒಪ್ಪಿಗೆ ಸಿಗುವ ನಿರೀಕ್ಷೆಯಲ್ಲಿ ಕರ್ನಾಟಕ ಸರ್ಕಾರವಿದೆ. ಮೇಕೆದಾಟು ಯೋಜನೆಗೆ ತಮಿಳುನಾಡು, ಪುದುಚೇರಿ ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.
ಮೇಕೆದಾಟು ಯೋಜನೆಯ ಡಿಪಿಆರ್‌ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೇ ಅಂತಿಮ ಒಪ್ಪಿಗೆ ನೀಡಬೇಕು ಎಂದು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಈ ಯೋಜನೆ ಕರ್ನಾಟಕದಲ್ಲಿ ರಾಜಕೀಯ ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದೆ.
ನವದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ತಮಿಳುನಾಡು, ಕರ್ನಾಟಕ, ಪುದುಚೇರಿ, ಕೇರಳ ರಾಜ್ಯಗಳ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡ ಭಾಗವಹಿಸಲಿದೆ. ತಮಿಳುನಾಡು ಮೇಕೆದಾಟು ಯೋಜನೆಗೆ ಈಗಾಗಲೇ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆಸಬಾರದು ಎಂದು ಸೂಚನೆ ನೀಡಬೇಕು ಎಂದು ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರವನ್ನು ಸಹ ಬರೆದಿದ್ದಾರೆ.
ಕೇಂದ್ರ ಜಲಶಕ್ತಿ ಖಾತೆ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಭೇಟಿ ಮಾಡಿದ್ದ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಖಾತೆ ಸಚಿವ ಗೋವಿಂದ ಕಾರಜೋಳ ಡಿಪಿಆರ್‌ಗೆ ಒಪ್ಪಿಗೆ ನೀಡುವಂತೆ ಒತ್ತಡ ಹೇರಿದ್ದರು.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡನೆ ಮಾಡಿದ 2022-23ನೇ ಸಾಲಿನ ಬಜೆಟ್‌ನಲ್ಲಿ ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.