ಇತ್ತೀಚಿನ ಸುದ್ದಿ

ನಾವೆಲ್ಲರೂ ಕನ್ನಡ ಉಳಿಸಬೇಕು: ಡಿಸಿಎಂ

ನಾವೆಲ್ಲರೂ ಕನ್ನಡ ಉಳಿಸಬೇಕು. ನಮಗೆ ಕನ್ನಡಪರ ಹೋರಾಟಗಾರರ ಬಗ್ಗೆ ಗೌರವ ಇದೆ. ಕನ್ನಡದ ಹೆಸರಿನಲ್ಲಿ ಹೋರಾಟಗಾರರು ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡಿದರೆ ನೋಡಿಕೊಂಡು ಸರ್ಕಾರ ಕಣ್ಣುಮುಚ್ಚಿಕೊಂಡು ಸುಮ್ಮನೆ ಇರಲು ಸಾಧ್ಯವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.

ಈ ಕುರಿತು ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಕನ್ನಡ ಉಳಿಸಿ, ಬೆಳೆಸುವ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ. ಹೋರಾಟದ ಹೆಸರಿನಲ್ಲಿ ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ. ಇದರಿಂದ ಕರ್ನಾಟಕದ ಗೌರವ, ಘನತೆಗೆ ಧಕ್ಕೆಯಾಗುತ್ತದೆ. ಕಾನೂನು ಪಾಲನೆ ಎಲ್ಲರ ಕರ್ತವ್ಯ. ನೀವು ಹೋರಾಟ ಮಾಡುವುದಾದರೆ ಮಾಡಿ, 60% ನಾಮಫಲಕ ಹಾಕಬೇಕು ಎನ್ನುವುದನ್ನು ಕೇಳಲು ಒಂದು ಇತಿಮಿತಿ ಇದೆ.

ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟೀಸ್ ನೀಡೋಣ. ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣಗೌಡರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ. ಪ್ರತಿಭಟನೆ ಮಾಡಲಿ, ಧಿಕ್ಕಾರ ಕೂಗಲಿ. ನಾವು ತಪ್ಪು ಮಾಡಿದರೆ ನಮ್ಮ ಮನೆ ಮುಂದೆಯೂ ಬಂದು ಪ್ರತಿಭಟನೆ ಮಾಡಲಿ. ನಾವೂ ಕನ್ನಡಿಗರೇ. ಕನ್ನಡದ ಬಗ್ಗೆ ನಮಗೂ ಬದ್ಧತೆ ಇದೆ. ಸಚಿವ ಸಂಪುಟದಲ್ಲಿ ನಿಮ್ಮ ಟಿಪ್ಪಣಿಗಳೇನೆ ಇದ್ದರೂ ಕನ್ನಡದಲ್ಲೇ ಇರಬೇಕು ಎಂದು ಮುಖ್ಯಮಂತ್ರಿಗಳು ಸಚಿವರುಗಳಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಕನ್ನಡ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಾಠ ಕಲಿಸುತ್ತೇವೆ ಎಂಬ ನಾರಾಯಣಗೌಡರ ಎಚ್ಚರಿಕೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕನ್ನಡಪರ ಹೋರಾಟಗಾರರ ಸಹಕಾರ ಇಲ್ಲ ಎಂದು ನಾನು ಹೇಳುವುದಿಲ್ಲ. ಹಾಗೆಂದು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಏನು ಬೇಕಾದರೂ ಮಾಡಲಿ. ಅವರು ತಪ್ಪು ಮಾಡಿದ್ದಾರೆ. ಕಾನೂನು ಕೈಗೆತ್ತಿಕೊಳ್ಳಲು ನಾವು ಬಿಡುವುದಿಲ್ಲ. ಅನೇಕರು ಇಲ್ಲಿ ಬಂದು ಬಂಡವಾಳ ಹೂಡಿಕೆ ಮಾಡಿದ್ದಾರೆ. ಹೊರಗಡೆಯಿಂದ ಬಂದವರು ಇಲ್ಲಿ ಬದುಕುತ್ತಿದ್ದಾರೆ. ಅವರಿಗೆ ಕನ್ನಡ ಬಳಕೆ ಬಗ್ಗೆ ಹೇಳೋಣ. ಹಾಗೆಂದು ಅವರನ್ನು ಬೆದರಿಸಲು ಅವಕಾಶವಿಲ್ಲ. ಯಾರೆಲ್ಲಾ ಕನ್ನಡ ನಾಮಫಲಕ ಹಾಕಿಲ್ಲ ಅವರಿಗೆ ನಾವು ನೊಟೀಸ್ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button